ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

0Shares

ಉಡುಪಿ ಮಾರ್ಚ್ 9 : ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತು ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುತ್ತಾರೆ. ಕುಟುಂಬದ ಜೊತೆ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ, ಪರ್ಯಾಯ ಶ್ರೀ ಶಿರೂರು ಮಠ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಈ ಸಮಾಜದ ಆಸ್ತಿ. ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಿದಾಗ ಇಡೀ ಕುಟುಂಬ ಏಳಿಗೆ ಕಾಣುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ನಾಯಕರಾದಾಗ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಆಡಳಿತ ನಡೆಸುತ್ತಾರೆ. ಮಹಿಳೆಯರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಾರೆ. ದೇಶದಲ್ಲಿ ರಾಜೀವ್ ಗಾಂಧಿ ನೇತೃತ್ವದ ಸರ್ಕಾರವಿದ್ದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳಲ್ಲಿ ಶೇ. 33% ಮಹಿಳಾ ಪ್ರಾತಿನಿಧ್ಯ ನೀಡುವ ಕಾರ್ಯ ನಡೆಯಿತು. ಇದು ಮಹಿಳೆಯರ ಸಬಲೀಕರಣಕ್ಕಾಗಿ ತೆಗೆದುಕೊಂಡ ದಿಟ್ಟ ನಿರ್ಧಾರವಾಗಿತ್ತು. ಇಂದಿನ ಸರ್ಕಾರ ಇದನ್ನು ಕಾನೂನಾಗಿ ಪರಿವರ್ತಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದ ಅವರು, ಜಿಲ್ಲಾ ಮಹಿಳಾ ಮಂಡಳಿಯ ಒಕ್ಕೂಟಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರ್ಕಾರದ ಗಮನ ಸೆಳೆದು ಸ್ವಂತ ಕಟ್ಟಡದ ಕನಸನ್ನು ನನಸು ಮಾಡಲಾಗುವುದು ಎಂದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now