
ಉಡುಪಿ ಮೇ 06 : ಐತಿಹಾಸಿಕ ಮಹತ್ವ ಹೊಂದಿರುವ ಬಾರ್ಕೂರನ್ನು ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಸಮಗ್ರ ಅಭಿವೃದ್ಧಿ ಮಾಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ ಪಾಟೀಲ್ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಬಾರ್ಕೂರಿನಲ್ಲಿ ವರ್ಷಕ್ಕೆ ಕನಿಷ್ಠ 100 ರಥೋತ್ಸವಗಳನ್ನು ಆಯೋಜಿಸುವ ಸಾಧ್ಯತೆಯನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದ ಅವರು, ಇತಿಹಾಸ ಪ್ರಸಿದ್ಧವಾದ ಬಾರ್ಕೂರು ಒಮ್ಮೆ ಆಳುಪ ವಂಶದ ರಾಜಧಾನಿಯಾಗಿದ್ದು, ಪ್ರತಿದಿನವೂ ರಥೋತ್ಸವ ನಡೆಯುತ್ತಿದ್ದುದಾಗಿ ಪರಂಪರೆಯಲ್ಲಿ ಉಲ್ಲೇಖಗಳಿವೆ ಎಂದರು.
ಈ ಯೋಜನೆಯ ಪ್ರಮುಖ ಉದ್ದೇಶ ಜನರನ್ನು ತಮ್ಮ ಮೂಲಗಳಿಗೆ ಮತ್ತೆ ಸಂಪರ್ಕಿಸುವುದರ ಜೊತೆಗೆ, ಬಾರ್ಕೂರನ್ನು ಪ್ರಮುಖ ಸಾಂಸ್ಕೃತಿಕ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವುದಾಗಿದೆ. ಇದಕ್ಕಾಗಿ ಸಮಗ್ರ ವರದಿ ಮತ್ತು ಕಾರ್ಯಯೋಜನೆ ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಿ .ಆರ್ ಝಡ್ ನಿಯಮಗಳಿಂದ ತೊಂದರೆ ಉಂಟಾಗುತ್ತಿದೆ. ನೆರೆಯ ರಾಜ್ಯಗಳಾದ ತಮಿಳುನಾಡು ಹಾಗೂ ಕೇರಳ ಮಾದರಿಯಲ್ಲಿ ರೂಪಿಸಿರುವ ನಿಯಮಗಳನ್ನು ರಾಜ್ಯದಲ್ಲಿಯೂ ಜಾರಿಗೆ ತಂದರೆ ಕಡಲ ತೀರದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.
ಶತಮಾನಗಳ ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು, ದಾಖಲೆಗಳ ಸಮೀಕ್ಷೆಯನ್ನು ಕೈಗೊಂಡು ಇವುಗಳನ್ನು ಇಂದಿನ ತಂತ್ರಜ್ಞಾನದ ಮೂಲಕ ಶಾಶ್ವತವಾಗಿ ಉಳಿಸಲಾಗುತ್ತದೆ. ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ಡಿಜಟಲೀಕರಣ, ನೊಂದಣಿ, ಅನುವಾದ ಮಾಡುವ ಮೂಲಕ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ವೇದಿಕೆ ಮೂಲಕ ಜನರ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲಾಗುವುದು.
ತಾಳೆಗರಿ, ಹಳೆಯ ಹಸ್ತಪ್ರತಿಗಳು, ಇತರೆ ರೂಪಗಳಲ್ಲಿ ಬರೆಯಲ್ಪಟ್ಟ ಪ್ರಾಚೀನ ವಿಜ್ಞಾನ, ಸಾಹಿತ್ಯ, ವೈದ್ಯಕೀಯ ಹಾಗೂ ಧಾರ್ಮಿಕ ಜ್ಞಾನ ಸಂಗ್ರಹಗೊಂಡಿದೆ. ಇವುಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೂ 6,000ಕ್ಕೂ ಹೆಚ್ಚು ಹಸ್ತ ಪ್ರತಿಗಳನ್ನು ಪೋರ್ಟನಲ್ಲಿ ಡಿಜಿಟಲ್ಲಿಕರಣ ಗೊಳಿಸಲಾಗಿದೆ. ಬಾಕಿ ಉಳಿದಿರುವ ಹಸ್ತ ಪ್ರತಿಗಳನ್ನು ಶೀಘ್ರದಲ್ಲಿಡಿಜಿಟಲ್ ಗಳಿಸಬೇಕೆಂದು ಸೂಚನೆ ನೀಡಿದರು.
ಕೆಲವು ದ್ವೀಪಗಳು ಮತ್ತು ಬ್ಯಾಕ್‌ವಾಟರ್ ಪ್ರದೇಶಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಗೆ ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು,
‘ಒನ್ ಸ್ಟೇಟ್, ಒನ್ ಡೆಸ್ಟಿನೇಶನ್’ ಪ್ರವಾಸೋದ್ಯಮ ಇಲಾಖೆಯ ಈ ಯೋಜನೆಯಡಿಯಲ್ಲಿ ಕಾಪು ಪ್ರಸ್ತುತ ಆಯ್ಕೆಯಾಗಿದೆ. ಮುಂದಿನ ದಿನಗಳಲ್ಲಿ ಬಾರ್ಕೂರನ್ನು ಸಹ ಈ ಯೋಜನೆಗೆ ಸೇರಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಮಾತನಾಡಿ ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳು, ಕಾಮಗಾರಿಗಳು ಹಾಗೂ ಪ್ರಸ್ತಾವನೆಯ ಬಗ್ಗೆ ಸಭೆಯಲ್ಲಿ ವಿವರವಾಗಿ ತಿಳಿಸಿದರು.
ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ ಗಫೂರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now