ಮುಗ್ಧ ವಿದ್ಯಾರ್ಥಿಗಳ ಮೇಲೆ ನಡೆದಿರುವ ಅಮಾನುಷ ಲಾಠಿಚಾರ್ಜ್ ದೇಶವೇ ತಲೆ ತಗ್ಗಿಸುವ ಘಟನೆ : ವೆರೋನಿಕ ಕರ್ನೇಲಿಯೊ

ಮುಗ್ಧ ವಿದ್ಯಾರ್ಥಿಗಳ ಮೇಲೆ ನಡೆದಿರುವ ಅಮಾನುಷ ಲಾಠಿಚಾರ್ಜ್ ದೇಶವೇ ತಲೆ ತಗ್ಗಿಸುವ ಘಟನೆ : ವೆರೋನಿಕ ಕರ್ನೇಲಿಯೊ
0Shares

ಉಡುಪಿ : ಮಕ್ಕಳ ಭವಿಷ್ಯದ ಬಗ್ಗೆ ಕಿಂಚಿತ್ ಕಾಳಜಿ ಇಲ್ಲದ ಪ್ರಧಾನ ಮಂತ್ರಿ ಹಾಗೂ ಅವರ ಸರಕಾರದಿಂದ ಪ್ರಾಯೋಜಿಸಲ್ಪಟ್ಟು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಮುಗ್ದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಅಮಾನುಷ ಲಾಠಿ ಚಾರ್ಜ್ ದೇಶವೇ ತಲೆತಗ್ಗಿಸುವ ಘಟನೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಮತ್ತು ಸರ್ಕಾರದ ನಿರ್ದಯತೆಯಿಂದ ಶಮನಗೊಂಡ ಶಾಂತಿಯುತ ಪ್ರಜಾಪ್ರಭುತ್ವ ಪ್ರತಿಭಟನೆಗೆ ದೇಶ ಸಾಕ್ಷಿಯಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದ ವಿದ್ಯಾರ್ಥಿಗಳ ಧ್ವನಿಗೆ ಉತ್ತರ ನೀಡುವ ಬದಲು ಬಲಪ್ರಯೋಗ ಮಾಡಿರುವ ಕಟುಕ ಸರಕಾರದ ವರ್ತನೆ ಖಂಡನೀಯ.

ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿದೆ
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ, ಅದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಟಿಯರ್ ಗ್ಯಾಸ್ ಪ್ರಯೋಗಿಸಿ, ಲಾಠಿಚಾರ್ಜ್ ನಡೆಸಿರುವುದು ಅಮಾನವೀಯ ಕೃತ್ಯವಾಗಿದೆ
ಸಂಪೂರ್ಣ ಆಡಳಿತ ವೈಫಲ್ಯದಿಂದ ಕಂಗೆಟ್ಟಿರುವ ಬಿಜೆಪಿ ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದೆ. ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಪೊಲೀಸ್ ಹಾಗೂ ಇತರೆ ಸಾರ್ವಜನಿಕ ಸಂಸ್ಥೆಗಳ ಮೂಲಕ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದು, ಇದನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕೇ ಹೊರತು, ಅಮಾಯಕ ವಿದ್ಯಾರ್ಥಿಗಳ ಮೇಲೆ ಲಾಠಿ ಎತ್ತುವುದಲ್ಲ.

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ನಿರಂತರವಾಗಿ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಪರವಾಗಿ ಹಾಗೂ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ದೆಹಲಿಯ ಜಂತರ್-ಮಂತರ್ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆಳವಣಿಗೆಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ದೇಶಾದ್ಯಂತ ಆಗ್ರಹ ವ್ಯಕ್ತವಾಗಿದ್ದರೂ, ಕೇಂದ್ರ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ.

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಬಲವಂತವಾಗಿ ಬಂಧಿಸಿರುವುದು ಮತ್ತು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದು ಅಮಾನವೀಯ ಹಾಗೂ ಸರ್ವಾಧಿಕಾರಿ ಧೋರಣೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಅಲ್ಲದೆ ವಿದ್ಯಾರ್ಥಿಗಳ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now