ಬೈಕ್ ಕದ್ದ ಯುವಕ ಪೊಲೀಸರ ಬಲೆಗೆ; ಕಳುವಾದ ವಾಹನ ವಶಕ್ಕೆ

ಬೈಕ್ ಕದ್ದ ಯುವಕ ಪೊಲೀಸರ ಬಲೆಗೆ; ಕಳುವಾದ ವಾಹನ ವಶಕ್ಕೆ
0Shares

ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ನೆರ್ಲೆಸರ ಪ್ರದೇಶದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಭಟ್ಕಳ ಗ್ರಾಮೀಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಏಪ್ರಿಲ್ 28, 2026ರಂದು ಮಧ್ಯರಾತ್ರಿ 12.30ರಿಂದ ಬೆಳಿಗ್ಗೆ 6 ಗಂಟೆಯೊಳಗಿನ ಅವಧಿಯಲ್ಲಿ ಹೆಬಳೆ ಗ್ರಾಮದ ನೆರ್ಲೆಸರದಲ್ಲಿರುವ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಪರ್ಲ್ ಮೆಟಾಲಿಕ್ ಬಣ್ಣದ ಬಜಾಜ್ ಪಲ್ಸರ್ ಎನ್‌ಎಸ್ 200 (ಕೆಎ-47-ಎಕ್ಸ್-0623) ಬೈಕ್ ಕಳ್ಳತನವಾಗಿತ್ತು. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದರು.

ಪ್ರಕರಣದ ತನಿಖೆಗಾಗಿ ವಿಶೇಷ ಪತ್ತೆ ತಂಡವನ್ನು ರಚಿಸಿದ್ದ ಪೊಲೀಸರು ಖಚಿತ ಮಾಹಿತಿಯ ಆಧಾರದ ಮೇಲೆ ಸೈಯದ್ ಅಲಿ (22), ಗಾರೆ ಕೆಲಸಗಾರ, ಫಿರ್ದೋಸ್ ನಗರ, ಹೆಬಳೆ ನಿವಾಸಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳುವಾಗಿದ್ದ ಪಲ್ಸರ್ ಎನ್‌ಎಸ್ 200 ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ್ ಬಿ. ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ವೆಂಕಟೇಶ ಮುರನಾಳ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ಭರಮಪ್ಪ ಬೆಳಗಲಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಮಂಜುನಾಥ ಗೊಂಡ, ಈರಣ್ಣ ಪೂಜೇರಿ, ಬಾಗಪ್ಪ ಕಡಕಲ್ ಮತ್ತು ನಿಂಗನಗೌಡ ಪಾಟೀಲ್ ಭಾಗವಹಿಸಿದ್ದರು.

ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now