ಆಂಬ್ಯುಲೆನ್ಸ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟ: ರೋಗಿ ಸಾವು, ಇಬ್ಬರು ಗಂಭೀರ

ಆಂಬ್ಯುಲೆನ್ಸ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟ: ರೋಗಿ ಸಾವು, ಇಬ್ಬರು ಗಂಭೀರ
0Shares

ಭುವನೇಶ್ವರ: ಆಸ್ಪತ್ರೆಯ ಆವರಣದಲ್ಲೇ ಆಂಬ್ಯುಲೆನ್ಸ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ರೋಗಿಯೊಬ್ಬರು ಮೃತಪಟ್ಟ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಉಡಾಲಾ ಉಪವಿಭಾಗೀಯ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಈ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಉಡಾಲಾ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಬಾಯಿ ಗ್ರಾಮದ 46 ವರ್ಷದ ಸುಜೋಗ್ ಬಾರಿಕ್ ಎಂದು ಗುರುತಿಸಲಾಗಿದೆ.

ಉಸಿರಾಟದ ಸಮಸ್ಯೆ ಮತ್ತು ಜ್ವರದಿಂದ ಬಳಲುತ್ತಿದ್ದ ಸುಜೋಗ್ ಅವರನ್ನು ಗುರುವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಕರೆದೊಯ್ಯುವಂತೆ ವೈದ್ಯರು ಕುಟುಂಬದವರಿಗೆ ಸಲಹೆ ನೀಡಿದ್ದರು.

ಇದರಂತೆ, ಕುಟುಂಬದವರು ಗುರುವಾರ ರಾತ್ರಿ ಖಾಸಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಸುಜೋಗ್ ಅವರನ್ನು ಭುವನೇಶ್ವರಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದರು. ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಆಂಬ್ಯುಲೆನ್ಸ್‌ನ ಮೇಲ್ಭಾಗ ಕಿತ್ತು ಹಾರಿ, ಸಮೀಪದಲ್ಲಿದ್ದ ಜನರ ಮೇಲೆ ಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಉರಿಯುತ್ತಿದ್ದ ವಾಹನದಿಂದ ಸುಜೋಗ್ ಅವರನ್ನು ಹೊರಗೆ ಕರೆತಂದಿದ್ದಾರೆ. ಆದರೆ, ತೀವ್ರ ಸುಟ್ಟ ಗಾಯಗಳಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ.

ಆಂಬ್ಯುಲೆನ್ಸ್‌ನಲ್ಲಿದ್ದ ಸುಜೋಗ್ ಅವರ ಇಬ್ಬರು ಸಹಾಯಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಉಡಾಲಾ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now