
ಬ್ರಹ್ಮಾವರ:ಲಾರಿ, ಕಾರು ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ಸಮೀಪದ ಹೆರೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಬಾರ್ಕೂರು ನಿವಾಸಿ ಸರೀತಾ ಎಂದು ಗುರುತಿಸಲಾಗಿದೆ.
ಇವರು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಶುಕ್ರವಾರ ಬೆಳಿಗ್ಗೆ ಬಾರ್ಕೂರಿನಿಂದ ಸಂತೆಕಟ್ಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ
ಹಾಲಾಡಿಯಿಂದ ಉಪ್ಪಿನಂಗಡಿಗೆ ಮರದ ಕಟ್ಟಿಗೆಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯ ಟಯರ್ ಹೆರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಂಚರ್ ಆಗಿತ್ತು. ಟಯರ್ ದುರಸ್ತಿಗಾಗಿ ಲಾರಿಯನ್ನು ಹೆದ್ದಾರಿಯ ಎಡಭಾಗದಲ್ಲಿ ನಿಲ್ಲಿಸಲಾಗಿತ್ತು. ಈ ಸಂದರ್ಭ ವಾಹನ ಸವಾರರಿಗೆ ಮುನ್ಸೂಚನೆ ನೀಡುವ ಯಾವುದೇ ಸೂಚನಾ ಫಲಕವನ್ನು ಅಳವಡಿಸದೆ, ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ.
ಈ ಸಂದರ್ಭ ಬಾರ್ಕೂರಿನಿಂದ ಸಂತೆಕಟ್ಟೆಯ ಕಡೆಗೆ ತೆರಳುತ್ತಿದ್ದ ಸರೀತಾ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯ ಸಮೀಪಕ್ಕೆ ಬಂದಿದೆ.
ಮೊದಲು ಸ್ಕೂಟರ್ಗೆ ಡಿಕ್ಕಿ ಹೊಡೆದ ಕಾರು, ಬಳಿಕ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಅಪ್ಪಳಿಸಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಕೂಟರ್ ಕೂಡ ಜಖಂಗೊಂಡಿದೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ.
ಕೂಡಲೇ ಕೋಟದ ಜೀವನ್ ಮಿತ್ರ ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಹಾಗೂ ಸ್ಥಳೀಯರು ಕಾರ್ಯಪ್ರವೃತ್ತರಾಗಿ ಕಾರಿನೊಳಗೆ ಸಿಲುಕಿದ್ದ ಮಹಿಳೆಯನ್ನು ಹೊರತೆಗೆಯಲು ನೆರವಾದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿದು ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now