ಉಡುಪಿ, ಡಿಸೆಂಬರ್ 21, 2024: ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳಾದ ಭೂಮಿ ವಿದ್ಯುಚ್ಛಕ್ತಿ ಸೌಕರ್ಯ ರಸ್ತೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ ಸಾರ್ವಜನಿಕರಿಗೆ ಉದ್ಯೋಗ ದೊರೆಯುವಂತೆ ಕಾರ್ಯಪ್ರವೃತರಾಗಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಡಿಸೆಂಬರ್ 19ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 155 ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಗುರುತಿಸಿದ್ದು, ಈ ಭೂಮಿಗಳ ಭೂ ಸ್ವಾಧೀನ ಪ್ರಕ್ರೀಯೆಗಳನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಭೂಮಿಯನ್ನು ಕೆ.ಐ.ಡಿ.ಬಿ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು.
ಬೆಳಪು ಕೈಗಾರಿಕಾ ಪ್ರದೇಶ ಸಂಪರ್ಕ ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಜಮೀನನ್ನು ವಿಶೇಷ ಭೂ ಸ್ವಾಧೀನ ಅಧಿಕಾರಿಗಳು ಪರಿಹಾರ ವಿತರಿಸಿ ಕೆ.ಐ.ಎ.ಡಿ.ಬಿ ಶಾಖೆಗೆ ಹಸ್ತಾಂರಿಸಲು ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೇ ಈವರೆಗೆ ಆಗಿರುದಿಲ್ಲ ಎಂದು ಆಕ್ಷೇಪಣೆ ವ್ಯಕ್ತ ಪಡಿಸಿದ ಅವರು ಒಂದು ತಿಂಗಳ ಒಳಗಾಗಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ಸೂಚನೆ ನೀಡಿದರು.
ಮಿಯಾರು ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆ ಇದೆ. ಕೊಳವೆ ಬಾವಿಗಳಲ್ಲಿ ಸಹ ಸಾಕಷ್ಟು ನಿರೀಕ್ಷಿತ ಪ್ರಮಾಣದಲ್ಲಿ ನೀರು ಲಭ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆ ಆಗುವ ಹಿನ್ನಲೆ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿದ್ದಲ್ಲಿ ನೀರಿನ ಕೊರತೆ ನಿಗಿಸಲು ಸಾಧ್ಯ, ಇದಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಮದ್ಯಮ ಕೈಗಾರಿಕೆಗಳಲ್ಲಿ ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಕೆಲವು ಕೈಗಾರಿಕೆಗಳಿಗೆ ಸೂಚನೆ ನೀಡಲಾಗಿತ್ತು ಅದರನ್ವಯ ಶೇ.92 ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ನೀಡಲಾಗಿದೆ ಎಂದರು.
ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಕೈಗಾರಿಕೆಗಳನ್ನು ಸ್ಥಾಪಿಸಲು ಬಂದಂತಹ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದ ಅವರು ಹೊಸದಾಗಿ ಸಣ್ಣ ಕೇಂದ್ರ ಉದ್ಯೋಗವನ್ನು ಸೃಜನಿಸಲು ಹೆಚ್ಚಿನ ಪ್ರಚಾರ ನೀಡಬೇಕು ಎಂದರು.
ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆರ್.ಎಂ.ಸಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಈ ಬಗ್ಗೆ ಸಂಬಂಧ ಪಟ್ಟ ಮಾಲೀಕರುಗಳಿಗೆ ನೋಟಿಸ್ ನೀಡಬೇಕೆಂದು ಸೂಚನೆ ನೀಡಿದ ಅವರು ಕೆ.ಐ.ಎ.ಡಿ.ಬಿ ಯಿಂದ ಹಂಚಿಕೆ ಮಾಡಿರುವ ಭೂಮಿಯನ್ನು ನಿಯಮಗಳ ಅನ್ವಯ ಇನ್ನೂ ಯೋಜನೆಗಳ ಅನುಷ್ಠಾನ ಆಗದಿದ್ದಲ್ಲಿ ಅಂತವರಿಗೂ ಸಹ ನೋಟೀಸ್ ನೀಡಬೇಕು ಎಂದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಕೆ.ಐ.ಎ.ಡಿ.ಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now