
ಉಡುಪಿ, ಜನವರಿ 02 : ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಸಾಮರ್ಥ್ಯ ಹಾಗೂ ಪ್ರತಿಭೆ ಅಡಗಿರುತ್ತದೆ. ಅದನ್ನು ನಿರೇರೆದು ಪೋಷಿಸಿದಾಗ ಮಾತ್ರ ಆ ಮಗುವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.
ಅವರು ಇಂದು ಬ್ರಹ್ಮಾವರ ವಲಯದ ಕೊಕ್ಕರ್ಣೆ ದುರ್ಗಾ ಆಂಗ್ಲಮಾಧ್ಯಮ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಬೆಳೆಯುವಂತೆ ಮಾಡುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡುವ ಉದ್ದೇಶದಿಂದ ಸರಕಾರ ಪ್ರತೀ ವರ್ಷ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದು, ಪ್ರತಿಭೆ ಹೊಂದಿರುವ ಎಲ್ಲಾ ಮಕ್ಕಳಿಗೂ ಸೂಕ್ತ ವೇದಿಕೆ ದೊರಕುವಂತಾಗಬೇಕು ಎಂದರು.
ವಿದ್ಯಾರ್ಥಿಗಳು ಶಾಲಾ ಹಂತದಿಂದ ಕ್ಲಸ್ಟರ್, ತಾಲೂಕು ಮಟ್ಟದವರೆಗೂ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ, ಇಂದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದು, ಇಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದ್ದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ಭಾಗವಹಿಸಲು ಅವಕಾಶ ಪಡೆಯಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದು ಮುಖ್ಯ. ಸೋಲು-ಗೆಲುವು ಮುಖ್ಯವಲ್ಲ ಎಂದರು.
ಮಕ್ಕಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಇದು ಮಕ್ಕಳಿಗೆ ಪ್ರೇರೇಪಣೆ ನೀಡುವುದರೊಂದಿಗೆ ಅವರುಗಳಲ್ಲಿ ಏಕಾಗ್ರತೆ ಮೂಡಿಸಿ, ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡುತ್ತದೆ ಎಂದರು.
ಪೋಷಕರುಗಳು ತಮ್ಮ ಮಕ್ಕಳ ಆಸಕ್ತಿಗಳ ಕ್ಷೇತ್ರಗಳನ್ನು ಗುರುತಿಸಿ, ಪ್ರೋತ್ಸಾಹ ನೀಡಬೇಕು ಎಂದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜದಲ್ಲಿ ಉತ್ತಮ ನಾಗರಿಕನಾಗಿ ಬೆಳೆಯಲು ಶಿಕ್ಷಕರುಗಳು ಅವಕಾಶ ಮಾಡಿಕೊಡಬೇಕು ಎಂದರು.
ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಉತ್ತಮ ಪ್ರದರ್ಶನಗಳನ್ನು ನೀಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವಂತೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷಣ, ಆಶುಭಾಷಣ, ಚರ್ಚೆ, ಕಂಠಪಾಠ, ಭಕ್ತಿಗೀತೆ, ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು.
ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಭಾನ ಅಂಜಂ, ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಶಾಂತರಾಜ ಶೆಟ್ಟಿ, ಕುಚ್ಚೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವಿನ್ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿ. ಸದಾಶಿವ ಪೂಜಾರಿ, ಶಾಲೆಯ ಸಂಚಾಲಕಿ ಸುಮತಿ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ ಸ್ವಾಗತಿಸಿದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























