ಉಡುಪಿ, ಜನವರಿ 10 : ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಭಾರತ ಗಣರಾಜ್ಯೋತ್ಸವ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕವಾಗಿದ್ದು, ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ಇಲಾಖೆಯ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ, ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.
ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಿಗ್ಗೆ 9 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು. ಶಿಷ್ಟಾಚಾರದ ನಿಯಮಗಳಂತೆ ಭಾರತ ಗಣರಾಜ್ಯೋತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಮುದ್ರಿತ ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು,
ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ವಾಗತ, ಶಿಷ್ಟಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ, ಉತ್ತಮ ಧ್ವನಿವರ್ಧಕ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು, ಅಧಿಕಾರಿಗಳು, ಮಾಧ್ಯಮದವರು ಆಸಿನರಾಗಲು ಪ್ರತ್ಯೇಕವಾಗಿ ಆಸನದ ವ್ಯವಸ್ಥೆ ಮಾಡಬೇಕು ಅಧಿಕಾರಿಗಳಿಗೆ ತಿಳಿಸಿದರು.
ಭಾರತ ಗಣರಾಜ್ಯೋತ್ಸವದ ಪೆರೇಡ್ ವ್ಯವಸ್ಥೆಯನ್ನು ಏರ್ಪಡಿಸಲು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ರಾಷ್ಟ್ರ ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಮತ್ತು ಸ್ವಯಂಪ್ರೇರಿತವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್ಪಿ ಸಿದ್ಧಲಿಂಗಪ್ಪ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ಡಿಡಿಪಿಐ ಗಣಪತಿ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now