
ಕಾರವಾರ: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಶಿಕ್ಷಕರೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ಹಾರ್ಸಿಕಟ್ಟಾದ ಅಶೋಕ ಪ್ರೌಢಶಾಲೆಯ ಸಹ ಶಿಕ್ಷಕ ಹಾಗೂ ಪ್ರತಿಭಾವಂತ ಕ್ರೀಡಾಪಟು ಸುಬ್ರಹ್ಮಣ್ಯ ಪರಮೇಶ್ವರ ಗೌಡ (47) ಎಂದು ಗುರುತಿಸಲಾಗಿದೆ. ಮೂಲತಃ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಗೊನೇಹಳ್ಳಿ-ಕಡಮೆ ಗ್ರಾಮದವರಾಗಿದ್ದ ಅವರು ಎಲ್ಲರ ಪ್ರೀತಿಯ “ಸುಬ್ಬಣ್ಣಿ” ಎಂದೇ ಪರಿಚಿತರಾಗಿದ್ದರು.
ಮಾಹಿತಿಯ ಪ್ರಕಾರ, ಆಗಸ್ಟ್ 13ರಂದು ಸಂಜೆ ಎಂದಿನಂತೆ ಸಿದ್ದಾಪುರದ ಎಪಿಎಂಸಿ ಅಡಿಕೆ ಭವನಕ್ಕೆ ಬ್ಯಾಡ್ಮಿಂಟನ್ ಆಡಲು ತೆರಳಿದ್ದ ಸುಬ್ರಹ್ಮಣ್ಯ ಗೌಡ ಅವರು ಸ್ನೇಹಿತರೊಂದಿಗೆ ಆಟದಲ್ಲಿ ತೊಡಗಿಸಿಕೊಂಡಿದ್ದರು. ಇದೇ ವೇಳೆ ಏಕಾಏಕಿ ಅಸ್ವಸ್ಥಗೊಂಡು ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಸ್ಥಳದಲ್ಲಿದ್ದವರು ಅವರನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರೂ, ಪರಿಶೀಲಿಸಿದ ವೈದ್ಯರು ಅವರು ಆಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ವೈದ್ಯಕೀಯ ವರದಿ ಬಳಿಕ ನಿಖರ ಕಾರಣ ತಿಳಿದುಬರಲಿದೆ.
ಸುಬ್ರಹ್ಮಣ್ಯ ಗೌಡ ಅವರು ಶಿಕ್ಷಕರಾಗಿರುವುದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಅವರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಅನೇಕ ಯುವಕರಿಗೆ ಪ್ರೇರಣೆಯಾಗಿದ್ದರು. ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದ ಅವರ ಅಕಾಲಿಕ ನಿಧನ ಶಿಕ್ಷಣ ಹಾಗೂ ಕ್ರೀಡಾ ವಲಯಕ್ಕೆ ದೊಡ್ಡ ಆಘಾತವಾಗಿದೆ.
ಆಟವಾಡುತ್ತಿದ್ದಾಗಲೇ ಅವರ ಬದುಕಿನ ಪಯಣ ಅಂತ್ಯಗೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಸಹೋದ್ಯೋಗಿಗಳು, ವಿದ್ಯಾರ್ಥಿಗಳು, ಸ್ನೇಹಿತರು ಹಾಗೂ ಕ್ರೀಡಾಭಿಮಾನಿಗಳಲ್ಲಿ ಶೋಕ ಮಡುಗಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಹಲವರು ಸಂತಾಪ ಸೂಚಿಸುತ್ತಿದ್ದಾರೆ.
ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now