
ಕಾರವಾರ: ಕಾರವಾರದಲ್ಲಿ ಕಲಾತ್ಮಕ ಹಾಗೂ ಆಕರ್ಷಕವಾದ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಂಗಮಂದಿರ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ ಮೂರು ವರ್ಷಗಳ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ನಡುವೆ ಕಟ್ಟಡ ನಿರ್ಮಾಣದ ದರಗಳು ಪರಿಷ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಹೊಸ ಅಂದಾಜು ಪಟ್ಟಿ ಪಡೆದು ಸರ್ಕಾರಕ್ಕೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸುಮಾರು 20 ಗುಂಟೆ ಜಾಗವನ್ನು ರಂಗಮಂದಿರ ನಿರ್ಮಾಣಕ್ಕಾಗಿ ಗುರುತಿಸಲಾಗಿದ್ದು, ಆ ಜಾಗವನ್ನು ರಂಗಮಂದಿರಕ್ಕೆ ಮೀಸಲಿಡುವ ಸಂಬಂಧ ಅಗತ್ಯ ದಾಖಲೆಗಳನ್ನು ಪಡೆದು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ರಂಗಮಂದಿರ ನಿರ್ಮಾಣವಾಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ವಾಸರೆ ಸಲಹೆ ನೀಡಿದರು. ಆರ್ಟ್ ಗ್ಯಾಲರಿ, ಗ್ರಂಥಾಲಯ, ಉತ್ತಮ ಧ್ವನಿ-ಬೆಳಕು ವ್ಯವಸ್ಥೆ ಹಾಗೂ ಪಾರ್ಕಿಂಗ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒಳಗೊಂಡಿರಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ತಹಸೀಲ್ದಾರ ನಿಶ್ಚಲ್ ನರೋನಾ, ಪೌರಾಯುಕ್ತ ಜಗದೀಶ ಹುಲಗಜ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಾನಾಯ್ಕ ಸೇರಿದಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now