
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪದ ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುವ ಯೂ ಟರ್ನ್ ಬಳಿ ಮತ್ತೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೀನು ಸಾಗಾಟದ ಇನ್ಸುಲೇಟರ್ ವಾಹನ ಹಾಗೂ ಭಾರೀ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ.
ಘಟನೆಯಲ್ಲಿ ಎರಡೂ ವಾಹನಗಳಲ್ಲಿದ್ದವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಮೀನು ಸಾಗಾಟದ ಇನ್ಸುಲೇಟರ್ ವಾಹನವು ಹೆದ್ದಾರಿಯ ಪೂರ್ವ ಭಾಗದ ರಸ್ತೆಯಿಂದ ಏಕಾಎಕಿ ಬಲಭಾಗಕ್ಕೆ ತಿರುವು ಪಡೆಯುತ್ತಿದ್ದ ವೇಳೆ, ಬ್ರಹ್ಮಾವರ ಕಡೆಯಿಂದ ಕುಂದಾಪುರದತ್ತ ಭಾರೀ ಸರಕು ತುಂಬಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಹಾಗೂ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಗಳು ತೀವ್ರವಾಗಿ ಹಾನಿಗೀಡಾಗಿವೆ. ಅಪಘಾತದ ರಭಸಕ್ಕೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆಯನ್ನು ತೆರೆದಿಟ್ಟಿದೆ.
ಸಾವಿನ ಸರಣಿ ಮುಂದುವರಿಯುವ ಆತಂಕ
ಈ ಹೆದ್ದಾರಿ ಭಾಗದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವುದು ಸ್ಥಳೀಯರ ನಿದ್ದೆಗೆಡಿಸಿದೆ. ಕೆಲವೇ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.
ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ ಘಟನೆ ಇನ್ನೂ ಜನಮಾನಸದಿಂದ ಮಾಸಿಲ್ಲ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಅವೈಜ್ಞಾನಿಕ ಯೂಟರ್ನ್ ವಿರುದ್ಧ ಆಕ್ರೋಶ
ಅಂಬರತೀರ್ಥೇಶ್ವರಿ ದೇವಸ್ಥಾನದ ಸರ್ಕಲ್ ಸಮೀಪದ ಯೂಟರ್ನ್ ಅವೈಜ್ಞಾನಿಕವಾಗಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿಬರುತ್ತಿವೆ.
ಸಮರ್ಪಕ ಸಂಚಾರ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕೊರತೆಯಿಂದ ಈ ಪ್ರದೇಶ ಅಪಘಾತ ವಲಯವಾಗಿ ಮಾರ್ಪಡುತ್ತಿದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈಗಾಗಲೇ ಹಲವು ಅಪಘಾತಗಳಿಗೆ ಸಾಕ್ಷಿಯಾಗಿರುವ ಈ ಸ್ಥಳದಲ್ಲಿ ಮತ್ತೊಂದು ಜೀವಹಾನಿ ಸಂಭವಿಸುವ ಮುನ್ನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಳ್ಳಬೇಕು. ಅವೈಜ್ಞಾನಿಕ ಯೂಟರ್ನ್ ವ್ಯವಸ್ಥೆಯನ್ನು ಪರಿಶೀಲಿಸಿ, ಅಗತ್ಯ ಬದಲಾವಣೆ ಹಾಗೂ ಸೂಕ್ತ ಸುರಕ್ಷತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now