ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

0Shares

ಉಡುಪಿ, ಡಿಸೆಂಬರ್ 10 : ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ ಪೋಷಕರನ್ನು ಕಳೆದುಕೊಂಡ ಪಾಲನೆ, ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ವತಿಯಿಂದ ಗೋವಾ ಮತ್ತು ಬೆಂಗಳೂರು ಮೂಲದ ಇಬ್ಬರು ದಂಪತಿಗಳಿಗೆ ಮಕ್ಕಳನ್ನು ಕಾನೂನು ಬದ್ಧವಾಗಿ ನೀಡುವ ಮೂಲಕ ದತ್ತು ಆದೇಶವನ್ನು ವಿತರಿಸಿ ಮಾತನಾಡುತ್ತಿದ್ದರು.

ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಹಾಗೂ ಪೊದೆಗಳಲ್ಲಿ ಎಸೆಯದೇ ಮಕ್ಕಳ ರಕ್ಷಣೆಗಾಗಿ ಇರುವ ವಿಶೇಷ ಮಮತೆಯ ತೊಟ್ಟಿಲುಗಳಲ್ಲಿ ಮಕ್ಕಳನ್ನು ಬಿಡಬಹುದಾಗಿದೆ. ಜಿಲ್ಲೆಯಲ್ಲಿ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ, ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಹಾಗೂ ಸರಕಾರಿ ಬಾಲಕಿಯರ ಬಾಲ ಮಂದಿರ ನಿಟ್ಟೂರು ಇಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ ಎಂದರು.

ಕಾನೂನು ಉಲ್ಲಂಘಿಸಿ ಅಥವಾ ಮಕ್ಕಳ ಮಾರಾಟ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಯವರು ಶಾಮೀಲಾಗಿದ್ದಲ್ಲಿ 1 ಲಕ್ಷ ರೂಪಾಯಿ ದಂಡ ಹಾಗೂ 7 ವರ್ಷದ ವರೆಗೆ ಜೈಲು ಶಿಕ್ಷೆ ಹಾಗೂ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಮಕ್ಕಳನ್ನು ಕೊಂಡುಕೊಂಡವರಿಗೆ 1 ಲಕ್ಷ ದಂಡ ಹಾಗೂ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದರು.

ಈ ಸಂಧರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಲೀಗಲ್ ಕಂ ಪ್ರೋಭೆಷನರ್ ಆಫೀಸರ್ ಅಪೂರ್ವ ಕೋಟ್ಯಾನ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಲೀಟಾ ಡಾಟಾ ಅನಾಲಿಸ್ಟ್, ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಸಂಯೋಜಕಿ ಮೇರಿನಾ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, 2008 ರಿಂದ ಈವರೆಗೆ 108 ಸ್ವದೇಶಿ ಹಾಗೂ 6 ವಿದೇಶಿ ಪೊಷಕರಿಗೆ ಮಕ್ಕಳನ್ನು ದತ್ತು ನೀಡಲಾಗಿದೆ. ಜಿಲ್ಲಾಧಿಕಾರಿಗಳಿಂದ 19 ಪೋಷಕರಿಗೆ ದತ್ತು ಆದೇಶ ನೀಡಲಾಗಿದೆ. ದತ್ತು ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ತಿತಿತಿ.ಛಿಚಿಡಿಚಿ.gov.ಟಿiಛಿ.iಟಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಕಛೇರಿ ದೂ.ಸಂಖ್ಯೆ: 0820-2574964 ಹಾಗೂ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ, ಆಶೀರ್ವಾದ್ ರಸ್ತೆ, ಸಂತೆಕಟ್ಟೆ ಅನ್ನು ಸಂಪರ್ಕಿಸಬಹುದಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now