ಪುತ್ತೂರು: ಅಂತ‌ರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

ಪುತ್ತೂರು: ಅಂತ‌ರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!
0Shares

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮಾಡೂರು ಕಾವು ಎಂಬಲ್ಲಿ ಜೂನ್ 19ರಿಂದ 20, 2026ರ ಅವಧಿಯಲ್ಲಿ ನಡೆದ ಓಮ್ಮಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತ‌ರ್ ರಾಜ್ಯ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ. 94/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಪ್ರಮೋದ್ ಕುಮಾ‌ರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐಗಳಾದ ಗುಣಪಾಲ ಜೆ. ಮತ್ತು ಸುಷ್ಮಾ ಜಿ. ಭಂಡಾರಿ ನೇತೃತ್ವದ ತನಿಖಾ ತಂಡವು ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದೆ.

ಕೇರಳದ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ. (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ. (24) ಬಂಧಿತ ಆರೋಪಿಗಳು.

ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ ಸುಮಾರು ₹2.5 ಲಕ್ಷ ಮೌಲ್ಯದ ಓಮ್ಮಿ ಕಾರು ಹಾಗೂ ಕಳ್ಳತನಕ್ಕೆ ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಕೆಟಿಎಂ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿಚಾರಣೆಯ ವೇಳೆ ಆರೋಪಿಗಳು ಮಾಡೂರು ಕಾವಿನಿಂದ ಓಮ್ನ ಕಾರನ್ನು ಕದ್ದು ಕೇರಳಕ್ಕೆ ಕೊಂಡೊಯ್ದು, ಬಳಿಕ ತಮಿಳುನಾಡಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ತಮಿಳುನಾಡಿನಲ್ಲಿ ಕದ್ದ ವಾಹನವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಕೇರಳದ ಬದಿಯಡ್ಕ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿಯೂ ಈ ಹಿಂದೆಯೇ ಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now