
ಶಿವಮೊಗ್ಗ : ಸಂಚಾರ ನಿಯಮಗಳನ್ನು ಉಲ್ಲಂಘಿಸಿ ನಗರದಲ್ಲಿ ಸಂಚರಿಸುತ್ತಿದ್ದ ಆಟೊ ರಿಕ್ಷಾಗಳ ವಿರುದ್ಧ ಶಿವಮೊಗ್ಗ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಒಂದೇ ದಿನದಲ್ಲಿ 70 ಆಟೊಗಳನ್ನು ವಶಕ್ಕೆ ಪಡೆದಿದ್ದಾರೆ.
ಸಂಚಾರ ಠಾಣೆ ಇನ್‌ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಶಿವಪ್ಪ ನಾಯಕ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ವ್ಯಾಪಕ ತಪಾಸಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಫಿಟ್ನೆಸ್ ಸರ್ಟಿಫಿಕೇಟ್ (ಎಫ್‌ಸಿ) ನವೀಕರಿಸದಿರುವುದು, ವಿಮೆ ಇಲ್ಲದೇ ಸಂಚರಿಸುವುದು ಹಾಗೂ ಅಗತ್ಯ ದಾಖಲೆಗಳ ಕೊರತೆ ಕಂಡುಬಂದ ಆಟೊಗಳನ್ನು ವಶಕ್ಕೆ ಪಡೆಯಲಾಗಿದೆ.
ವಶಪಡಿಸಿಕೊಂಡ ವಾಹನಗಳನ್ನು ದೊಡ್ಡಪೇಟೆ ಹಾಗೂ ಪೂರ್ವ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಲ್ಲಿಸಲಾಗಿದ್ದು, ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಒ) ಅಧಿಕಾರಿಗಳ ಸಮ್ಮುಖದಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ.
ನಗರದಲ್ಲಿ ಮೀಟರ್ ಬಳಸದಿರುವುದು ಹಾಗೂ ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಮಫ್ತಿ ಪೊಲೀಸರನ್ನು ನಿಯೋಜಿಸಿ ಆಟೊಗಳ ಸಂಚಾರ ಹಾಗೂ ದರ ವಸೂಲಿಯ ಮೇಲೆ ನಿಗಾ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಅಧಿಕಾರಿಗಳು, ಮೀಟರ್ ಬಳಸದ ಚಾಲಕರು ಹಾಗೂ ಅನಧಿಕೃತವಾಗಿ ಹೆಚ್ಚುವರಿ ದರ ವಸೂಲಿ ಮಾಡುವವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ನಗರದಲ್ಲಿ ಸಂಚಾರ ನಿಯಮ ಪಾಲನೆ ಹಾಗೂ ಸಾರ್ವಜನಿಕರಿಗೆ ಸುಗಮ ಸೇವೆ ಒದಗಿಸುವ ಉದ್ದೇಶದಿಂದ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now