
ಉಡುಪಿ, ಮಾರ್ಚ್ 26 : ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ ಭೂಮಿಗಳನ್ನುನ್ನು ಗುರುತಿಸಲಾಗಿದೆ. ಕೆ.ಐ.ಎ.ಡಿ.ಬಿ ಯವರು ಈ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಕೈಗಾರಿಕೆಗಳು ಸ್ಥಾಪನೆಗೊಂಡು ಜನರಿಗೆ ಉದ್ಯೋಗ ದೊರಕಿಸಿಸುವಂತಾಗಬೇಕೆಂದರು.
ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ ಹಾಗೂ ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಜಮೀನು ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನ ಭೂ ಮಾಲೀಕರಿಗೆ ಪೂರ್ಣ ಪರಿಹಾರಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆಯು ಬಾಕಿ ಇದೆ. ಈ ಭೂಮಿಯು ಇಕೋ ಸೆನ್ಸಿಟೀವ್ ಝೋನ್ನಲ್ಲಿ ಬರುವ ಬಗ್ಗೆ ಪರಿಶೀಲನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದರು.

ಜಿಲ್ಲೆಯ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅನುಮತಿ ಪಡೆಯದೇ ಹಾಗೂ ಜಾಗಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿ ನೀಡದೇ ಆರ್.ಎಂ.ಸಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಮಾಲೀಕರುಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ ಅವರು, ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದರು.
ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಸ್ವಲ್ಪ ಮಟ್ಟದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.
ಮಿಯ್ಯಾರು ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಯೊಂದು ಕೈಗಾರಿಕಾ ಘಟಕಗಳೂ ಮಳೆ ನೀರು ಕೊಯ್ಲು ಅನ್ನು ಅಳವಡಿಸಿಕೊಳ್ಳಬೇಕು. ಇದರಿಂದಾಗಿ ಸ್ಥಳೀಯವಾಗಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 22 ರಫ್ತು ಆಧಾರಿತ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ವಿದೇಶಿ ರಫ್ತನ್ನು ಉತ್ತೇಜಿಸುವುದರೊಂದಿಗೆ ಇನ್ನಷ್ಟು ಹೆಚ್ಚಿಸಬೇಕೆಂದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಕೆ.ಐ.ಎ.ಡಿ.ಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ, ಶಿವಮೊಗ್ಗ ಕೆ.ಎಸ್.ಎಸ್.ಐ.ಡಿ.ಸಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ನಾಗಾಭರಣ ಕೆ.ಪಿ, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























