ದಾರ್ಶನಿಕರ ಮಾರ್ಗ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ದಿನಕರ ಹೇರೂರು

ದಾರ್ಶನಿಕರ ಮಾರ್ಗ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ದಿನಕರ ಹೇರೂರು

0Shares

ಉಡುಪಿ, ಮಾರ್ಚ್ 28 : ದಾರ್ಶನಿಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಮಾಜಕ್ಕಾಗಿ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ. ಇಂದಿನ ಯುವ ಪೀಳಿಗೆಯು ದಾರ್ಶನಿಕರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ರಾಷ್ಟ, ನಾಡು ನುಡಿಯ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.

ಅವರು ಇಂದು ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಅಗ್ನಿ ಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಅಗ್ನಿ ಬನ್ನಿರಾಯರ ಸೇವೆಗಳನ್ನು ನೆನೆಯುವ ಉದ್ದೇಶದಿಂದ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬಂದಿದ್ದು, ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಮಾರ್ಗವನ್ನು ಸೂಚಿಸಿದವರು ಇಂತಹ ವೀರ ಪುರುಷರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಮಾತನಾಡಿ, ಅಗ್ನಿ ಬನ್ನಿರಾಯರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ತಿಳಿಯುವುದರ ಜೊತೆಗೆ ಅವರು ನೀಡಿದ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಮಹಾಪುರುಷರ ವ್ಯಕ್ತಿತ್ವ ಹಾಗೂ ಅವರ ತತ್ವ ಸಿದ್ದಾಂತಗಳ ಅರಿವು ಹೊಂದುವುದು ಅತ್ಯವಶ್ಯವಾಗಿದ್ದು, ವಿದ್ಯಾರ್ಥಿಗಳು ಪ್ರಜ್ಞಾವಂತರಾಗಿ ಮಹಾನೀಯರ ಕುರಿತು ಹೆಚ್ಚಿನ ವಿಚಾರಗಳನ್ನು ಅರಿಯುವ ಮೂಲಕ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಬೇಕು ಎಂದರು.

ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನ ಪಚ್ಚಿನಡ್ಕ ಶ್ರೀ ಅಗ್ನಿ ಬನ್ನಿರಾಯರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಖಜಾಂಜಿ ರಮಾದೇವಿ, ಉಪಸಭಾಪತಿ ಡಾ. ಅಶೋಕ್ ವೈ.ಜಿ, ಮಾಜಿ ಸದಸ್ಯ ಕಾರ್ಯದರ್ಶಿ ಕೆ.ಬಾಲಕೃಷ್ಣ ಹೆಗ್ಡೆ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ರೆಡ್ಕ್ರಾಸ್ ಸಂಸ್ಥೆಯ ಸಿಬ್ಬಂಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಇಲಾಖೆಯ ವರ್ಷಾ ಕೋಟ್ಯಾನ್ ನಿರೂಪಿಸಿ ವಂದಿಸಿದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now