
ಉಡುಪಿ, ಜೂನ್ 17 : ಅಪಘಾತ ಹಾಗೂ ಇನ್ನಿತರ ಕಾಯಿಲೆಗಳಿಂದ ಪ್ರಾಣಾಪಾಯದಲ್ಲಿರುವ ಜೀವ ಉಳಿಸಲು ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಜನರು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ ಹುಬ್ಬಳ್ಳಿ ಕರೆ ನೀಡಿದರು.
ಅವರು ಇಂದು ನಗರದ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ, ಯೂತ್ ರೆಡ್ಕ್ರಾಸ್, ರೋರ್ಯಾಕ್ಟ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುತ್ಪಾಡಿ ಹಾಗೂ ಜೆಸಿಐ ಅಲೂಮಿನಿ ಕ್ಲಬ್ ವಲಯ 15 ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಪ್ರತಿದಿನ ಸೂಕ್ತ ಗುಂಪಿನ ರಕ್ತದ ಕೊರತೆಯಿಂದ ಹಾಗೂ ಅಪಘಾತದಲ್ಲಿ ತೀವ್ರತರಹದ ಗಾಯದಿಂದ ರಕ್ತಸ್ರಾವವಾಗಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿದೆ. ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಮಾಹಿತಿಯ ಕೊರತೆ ಇದ್ದು, ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ರಕ್ತದಾನದಂತಹ ಮಹತ್ವಪೂರ್ಣವಾದ ಕಾರ್ಯದಲ್ಲಿ ಭಾಗವಹಿಸುವಂತೆ ಪ್ರೇರೆಪಿಸಬೇಕು ಎಂದರು.
ರಕ್ತದಾನ ಶ್ರೇಷ್ಠದಾನವಾಗಿದ್ದು, ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಅದನ್ನು ಕೃತಕವಾಗಿ ತಯಾರಿಸಲೂ ಸಾಧ್ಯವಿಲ್ಲ. ವ್ಯಕ್ತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ಬಾರಿಯಾದರೂ ರಕ್ತದಾನ ಮಾಡಿದ್ದಲ್ಲಿ ದೇಹದಲ್ಲಿ ಹೊಸ ರಕ್ತ ಉತ್ಪಾದನೆ ಆಗುವುದರೊಂದಿಗೆ ಹೃದಯಾಘಾತ, ಕ್ಯಾನ್ಸರ್, ಹೃದಯರೋಗಗಳು ಸೇರಿದಂತೆ ಮತ್ತಿತರ ಕಾಯಿಲೆಗಳಿಂದ ದೂರ ಉಳಿಯಬಹುದಾಗಿದೆ ಎಂದ ಅವರು, ಯುವ ಜನತೆ ಸ್ವಯಂಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದಾಗಬೇಕು ಎಂದರು.

ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್ ಮಾತನಾಡಿ, ಉಡುಪಿ ಜಿಲ್ಲೆಯು ರಕ್ತದಾನಿಗಳ ಜಿಲ್ಲೆಯ ಎಂದು ಗುರುತಿಸಲ್ಪಟ್ಟಿದೆ. ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಜನರು ರಕ್ತದಾನ ಮಾಡಲು ಮುಂದೆ ಬರುತ್ತಾರೆ. ನಮ್ಮ ಜಿಲ್ಲೆಯಿಂದ ಅಕ್ಕಪಕ್ಕದ ನೆರೆಯ ಜಿಲ್ಲೆಯವರು ರಕ್ತವನ್ನು ಕೊಂಡೊಯ್ಯುತ್ತಾರೆ. ವಿದ್ಯಾರ್ಥಿಗಳು ಜೀವನದಲ್ಲಿ ರಕ್ತದಾನ ಮಾಡುವ ಹ್ಯವಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಂಶುಪಾಲೆ ಡಾ.ಮಮತಾ ಕೆ.ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಸೇವೆಯಲ್ಲಿ ರಕ್ತದಾನವು ಶ್ರೇಷ್ಠ ದಾನವಾಗಿದೆ. ಒಬ್ಬರ ಜೀವವನ್ನು ಉಳಿಸಲು ರಕ್ತದಾನ ಬಹಳ ಮಹತ್ವವಾಗಿದೆ. ರಕ್ತದಾನದ ಬಗ್ಗೆ ಅರಿವು ಹೊಂದಲು ಇಂತಹ ಕಾರ್ಯಕ್ರಮಗಳು ಉಪಯೋಗ ಎಂದ ಅವರು, ರಕ್ತದಾನ ಮಾಡಲು ಸ್ವಯಂ ಪ್ರೇರಿತರಾಗಿ ಯುವಜನರು ಮುಂದೆ ಬರಬೇಕು ಎಂದು ಕರೆ ನೀಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು.
ಇದೇ ಸಂದರ್ಭದಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಾದ ಲಕ್ಷಿ್ಮೀಶ ಉಡುಪ, ರೂಪ ಬಲ್ಲಾಳ್, ಕಾರ್ತಿಕ್ ನಾಯ್ಕ್ ಹಾಗೂ ಗಿರಿಜ ಸುವರ್ಣ ಅವರುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ, ನಾಗರಾಜ್ ಎಸ್, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ, ಜೆಸಿಐ ಅಲೂಮಿನಿ ಕ್ಲಬ್ ಅಧ್ಯಕ್ಷೆ ಆಶಾ ಅಲೆನ್ ವಾಜ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಡಾ.ವಿದ್ಯಾಲಕ್ಷಿ್ಮೀ ಸ್ವಾಗತಿಸಿ, ಜಿಲ್ಲಾ ಕಾರ್ಯಕ್ರಮ ಮೇಲ್ವಿಚಾರಕ ಮಹಾಬಲೇಶ್ವರ ನಿರೂಪಿಸಿ, ಯೂತ್ರೆಡ್ಕ್ರಾಸ್ ಸಹಾಯಕ ಡೀನ್ ಯೋಗೀಶ್ ಆಚಾರ್ಯ ವಂದಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























