
ಉಡುಪಿ : ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕವಾಗಿ ಮಾದರಿ ಎನಿಸಿರುವ ಉಡುಪಿ ಜಿಲ್ಲೆಗೂ ಗಾಂಧೀಜಿಗೂ ಗಾಢವಾದ ನಂಟಿದೆ. ಸ್ವಾತಂತ್ರ್ಯ ಸಂಗ್ರಾಮದ ಹೊತ್ತಿನಲ್ಲಿ ಇಡೀ ದೇಶವನ್ನೇ ಸಂಘಟಿಸಿ ಮುನ್ನಡೆಸಿದವರು ಮಹಾತ್ಮಾ ಗಾಂಧೀಜಿ. ಸ್ವಾತಂತ್ರ್ಯಪೂರ್ವದಲ್ಲಿ ಗಾಂಧೀಜಿಯವರು ದೇಶಾದ್ಯಂತ ಸಂಚರಿಸುತ್ತಿದ್ದಾಗ 1934 ರಲ್ಲಿ ಜಿಲ್ಲೆಗೂ ಭೇಟಿ ನೀಡಿ ಅಜ್ಜರಕಾಡಿನಲ್ಲಿ ಸ್ವಾತಂತ್ರ್ಯ ಸೇನಾನಿಗಳನ್ನು ಉದ್ದೇಶಿಸಿ ಮಾತನಾಡಿ ಅವರನ್ನು ಹುರಿದುಂಬಿಸಿದ್ದರು. ಗಾಂಧೀಜಿಯವರ ಭೇಟಿಯ ನೆನಪಿಗಾಗಿ ಅವರ ಪುತ್ಥಳಿಯನ್ನು ಇಲ್ಲಿ ಪ್ರತಿಷ್ಠಾಪಿಸಿ ಅವರ ಆದರ್ಶಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಜಿಲ್ಲಾಡಳಿತ, ನಗರಸಭೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿ ಕಟ್ಟೆಯಲ್ಲಿ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶ ಕಂಡ ಮಹಾನ್ ನೇತಾರರಾದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಕೊಡುಗೆ ಮತ್ತು ಚಿಂತನೆಗಳು ನಮಗೆಲ್ಲರಿಗೂ ಆದರ್ಶವಾಗಿದೆ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಉತ್ತರದಿಂದ ದಕ್ಷಿಣದವರೆಗೆ ಭಾರತವನ್ನು ಏಕಸೂತ್ರದಲ್ಲಿ ಬೆಸೆದವರು ಮಹಾತ್ಮಾ ಗಾಂಧೀಜಿ. ದೇಶದ ಜನತೆ ಬ್ರಿಟಿಷರ ದಾಸ್ಯದಿಂದ ಮುಕ್ತಿ ಪಡೆದು ಸ್ವರಾಜ್ಯದಿಂದ ಸ್ವಾವಲಂಬಿಗಳಾಗುವ ಕನಸನ್ನು ಅವರು ಕಂಡಿದ್ದರು. ಅವರ ಆಶಯದಂತೆ ಇಂದು ದೇಶವು ಬಹಳಷ್ಟು ಬದಲಾವಣೆಗಳನ್ನು ಕಂಡಿದ್ದು ಆರ್ಥಿಕತೆಯಲ್ಲಿ ವಿಶ್ವದಲ್ಲೇ ನಾಲ್ಕನೇ ಸ್ಥಾನವನ್ನು ಹೊಂದಿದೆ. ಕೃಷಿ ಕ್ಷೇತ್ರದಿಂದ ಹಿಡಿದು ಆರೋಗ್ಯ, ಕ್ರೀಡೆ, ರಕ್ಷಣಾ ಕ್ಷೇತ್ರ, ತಂತ್ರಜ್ಞಾನ, ಬಾಹ್ಯಾಕಾಶ ಸಂಶೋಧನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಭಾರತದ ಸಾಧನೆ ವಿಶ್ವದ ಗಮನವನ್ನು ಸೆಳೆಯುವಲ್ಲಿ ಸಫಲವಾಗಿದೆ. ಗಾಂಧೀಜಿಯವರು ಮಾರ್ಗದರ್ಶನ ಮಾಡಿದ ಪಥದಲ್ಲಿ ಸಾಗಿ ದೇಶವನ್ನು ಮುನ್ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ಹೇಳಿದರು.
ನಗರಸಭಾಧ್ಯಕ್ಷ ಪ್ರಭಾಕರ್ ಪೂಜಾರಿ ಮಾತನಾಡಿ, ಗಾಂಧೀಜಿಯವರ ಆಶಯದಂತೆ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ಕಸ ಸಂಗ್ರಹಿಸಲು ಬರುವ ಪೌರಕಾರ್ಮಿಕರಿಗೆ ಸಾರ್ವಜನಿಕರುತಮ್ಮ ಮನೆಯ ಹಸಿ ಕಸ ಮತ್ತು ಒಣಗಿದ ಕಸವನ್ನು ವಿಂಗಡಣೆ ಮಾಡಿ ನೀಡಬೇಕು. ಇದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು ಇದರಿಂದ ಕಸವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸಾಧ್ಯ. ಒಂದೊಮ್ಮೆ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ ಮಹಾತ್ಮಾ ಗಾಂಧಿಯವರು ರಾಷ್ಟ್ರಪಿತರೆಂದು ಮಾನ್ಯರಾದವರಾದರೆ ಲಾಲ್ ಬಹಾದ್ದೂರ್ ಶಾಸ್ತ್ರಿಗಳು ಜೈ ಜವಾನ್ ಜೈ ಕಿಸಾನ್ ಘೋಷಣೆಯನ್ನು ನೀಡಿದವರು. ಇಂತಹ ಉನ್ನತ ವ್ಯಕ್ತಿತ್ವ ಹೊಂದಿದ ವ್ಯಕ್ತಿಗಳ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯ. ಮೌಲಿಕ ಜೀವನವನ್ನು ನಡೆಸಿ ವಿಶ್ವಕ್ಕೆ ಮಾದರಿಯಾದ ಅವರ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿಯೂ ಅಳವಡಿಸಿಕೊಂಡು ಮೌಲ್ಯಯುತವಾಗಿ ಬಾಳಿ ದೇಶಕ್ಕೆ ಕೀರ್ತಿ ತರಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ ವಿಭಾಗ
ಕುಂದಾಪುರ ತಾಲೂಕು ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶ್ರೀನಿತಾ (ಪ್ರಥಮ), ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶಿವಾನಿ (ದ್ವಿತೀಯ) ಹಾಗೂ ಕಾರ್ಕಳ ಕಾಬೆಟ್ಟು ಎಸ್.ವಿ.ಟಿ ಆಂಗಲ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅಸ್ಮಿತಾ (ತೃತೀಯ),
ಪಿ.ಯು ವಿಭಾಗ
ಕಾರ್ಕಳ ತಾಲೂಕು ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಸ್ನೇಹ (ಪ್ರಥಮ), ಕುಂದಾಪುರ ಸಂತ ಮೇರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ವಿದ್ಯಾಶ್ರೀ (ದ್ವಿತೀಯ) ಹಾಗೂ ಕುಂದಾಪುರ ತಾಲೂಕು ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಸುಶ್ಮಿತಾ ಆರ್ ನಾಯ್ಕ್ (ತೃತೀಯ),
ಪದವಿ ಕಾಲೇಜು ವಿಭಾಗ
ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಸವಿತಾ ಎಸ್.ಎಂ (ಪ್ರಥಮ), ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂ.ಎ ಇತಿಹಾಸ ವಿದ್ಯಾರ್ಥಿನಿ ಅಪ್ಸನಾ (ದ್ವಿತೀಯ) ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಅಶ್ವಿನಿ ಎನ್.ಡಬ್ಲ್ಯೂ (ತೃತೀಯ) ಇವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್. ಬಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಮಣಿಪಾಲ್ ಹಾಗೂಮತ್ತಿತರರು ಹಾಜರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now