
ಬ್ರಹ್ಮಾವರ, ಜುಲೈ 2: ಬ್ರಹ್ಮಾವರದಲ್ಲಿ 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸ ಮಾಡಿಸಿದ ಆರೋಪದಡಿ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದ ನಿವಾಸಿ ತಾರೇಶ್ ಅವರ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಪುತ್ರನನ್ನು ಜೂನ್ 1ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಅಪಹರಿಸಿ ಕೇರಳ ರಾಜ್ಯದ ತಲಪಾಡಿ ಸಮೀಪದ ಕುಂಜತ್ತೂರು ಪದವು ಪ್ರದೇಶದಲ್ಲಿರುವ ವುಡ್ ಕಂಪನಿಯೊಂದಕ್ಕೆ ಬಲವಂತವಾಗಿ ಕರೆದುಕೊಂಡು ಹೋಗಿ ಕೆಲಸಕ್ಕೆ ಸೇರಿಸಿದ್ದರು ಎನ್ನಲಾಗಿದೆ.
ಬಾಲಕನು ಮನೆಗೆ ಹೋಗುವುದಾಗಿ ಹೇಳಿದರೂ ಆರೋಪಿಗಳು ಅವಕಾಶ ನೀಡದೆ, ಜೂನ್ 9ರಂದು ವಾಸವಿದ್ದ ಕೋಣೆಯಲ್ಲಿ ಆರೋಪಿಗಳಲ್ಲಿ ಒಬ್ಬನಾದ ಸುಚಿತ್ ನಾಯಕ್ ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮತ್ತೋರ್ವ ಆರೋಪಿ ವಿಖ್ಯಾತ್ ಆಚಾರ್ಯ ಚೂರಿ ತೋರಿಸಿ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕೃತ್ಯದ ದೃಶ್ಯವನ್ನು ಮತ್ತೊಬ್ಬ ಆರೋಪಿ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2026ರಡಿ ಭಾರತೀಯ ನ್ಯಾಯ ಸಂಹಿತೆ (BNS), ಜುವೆನೈಲ್ ಜಸ್ಟಿಸ್ ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಆರೋಪಿಗಳಾದ ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತಿದೆ. ಪ್ರಕರಣದ ಮೂರನೇ. ಆರೋಪಿ ಬಾಲಾಪರಾಧಿಯಾಗಿರುವುದರಿಂದ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.
ಪ್ರಕರಣದ ಕುರಿತು ಬ್ರಹ್ಮಾವರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now