
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನ್ಯಾಯ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಸೋಗಿನಲ್ಲಿ ಬಂದವರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆರೋಪಿಸಿದರು.
ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ. ಆದರೆ ಅವರನ್ನು ಬಂಧಿಸುವ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಯುವಜನರನ್ನು ಬಳಸಿಕೊಂಡು ಸುಳ್ಳು ಅಪಪ್ರಚಾರ ನಡೆಸಿ ಯುಪಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿಗೆ, ಇಂದು ಅದೇ ಯುವಜನತೆ ತಿರುಗುಬಾಣವಾಗಿದೆ. ಈಗ ವಿದ್ಯಾರ್ಥಿಗಳನ್ನೇ ದೇಶದ್ರೋಹಿಗಳಂತೆ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು. ಕಳೆದ 12 ವರ್ಷಗಳಲ್ಲಿ ನೂರಾರು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸಾಧ್ಯವಾಗದಿದ್ದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಮ ಮಂದಿರ ಉಡುಗೊರೆ ದುರುಪಯೋಗ ಆರೋಪ: ಪ್ರಧಾನಿ ನೈತಿಕವಾಗಿ ಜವಾಬ್ದಾರರಾಗಿರಬೇಕು. ರಾಮ ಮಂದಿರ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರೇ ಇಂದು ಭಕ್ತರು ಸಮರ್ಪಿಸಿದ ಕಾಣಿಕೆಗಳ ಹುಂಡಿಗೆ ಕೈ ಹಾಕಿದ್ದಾರೆ. ಇದರ ನೈತಿಕ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಮೇಶ್ ಕಾಂಚನ್, ವಿಶ್ವಾಸ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now